ರಾಜ್ಯಸಭೆ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಬಾರಿ ಟಿಕೆಟ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದೇ ರೀತಿಯಲ್ಲಿ, ಐಟಿ ಸಚಿವ ಅಶ್ವಿನಿ ವೈಷ್ಣವ್, ಮತ್ತು ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.
ನವದೆಹಲಿ, ಫೆ.12 – ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಬಿಜೆಪಿ ರಾಜ್ಯಸಭೆ ಚುನಾವಣೆಗೆ ತನ್ನ 14 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಸಂಜೆ ಘೋಷಣೆ ಮಾಡಿದೆ. ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಬಾಗಲಕೋಟೆ ಮೂಲದವರಾಗಿದ್ದು, ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕರ್ನಾಟಕದ ಎಸ್‌ಎಸ್‌ಕೆ ಸಮಾಜದ ಮುಖಂಡರಾಗಿದ್ದಾರೆ.
ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‌ನ ಎಲ್. ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು ಏಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ. ಈ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 224 ಶಾಸಕರು ಮತದಾರರಾಗಿದ್ದು, ವಿಧಾನಸಭೆಯ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್ ಮೂರು ಹಾಗೂ ಬಿಜೆಪಿ ಒಂದು ಸ್ಥಾನ ಗೆಲ್ಲಬಹುದು.
ಮೋದಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಿರ್ಮಲಾ ಮತ್ತು ರಾಜೀವ್ ಚಂದ್ರಶೇಖರ್ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಖಚಿತ ಎಂದು ಹೇಳಲಾಗುತ್ತಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ನಿರ್ಮಲಾ ಸೀತರಾಮನ್, ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದಿಂದ ರಾಜೀವ್ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾಲಿ ಸಂಸದ ತೇಜಸ್ವಿ ಸೂರ್ಯ ತಮ್ಮ ಕ್ಷೇತ್ರ ಬಿಟ್ಟು ಬೇರೆಡೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ವಿದ್ಯಾವಂತ ಮತದಾರರಿದ್ದಾರೆ. ಈ ಭಾಗದಲ್ಲಿ ಈ ಇಬ್ಬರು ಜನಪ್ರಿಯ ನಾಯಕರಾಗಿದ್ದಾರೆ, ಹಾಗಾಗಿ ಈ ಕ್ಷೇತ್ರಗಳಿಂದಲೇ ಇಬ್ಬರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ, ಒಂದು ವೇಳೆ ನಿರ್ಮಲಾ ಸೀತಾರಾಮನ್ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿದರೇ ತೇಜಸ್ವಿ ಸೂರ್ಯಾ ಬೇರೆ ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.