ಬೆಂಗಳೂರು,ಜೂ.7- ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಫಾರೂಕ್ ಅಬ್ದುಲ್ಲಾ ಅವರು ಇಂದು ಮಧ್ಯಾಹ್ನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದರು. ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ನಜೀರ್ ಅಹಮದ್, ಗೋವಿಂದರಾಜು, ಸಚಿವ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು. ಇದಕ್ಕು ಮುನ್ನ ಫಾರೂಕ್ ಅಬ್ದುಲ್ಲಾ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.
ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ, “ಭಾರತದ ಪ್ರಧಾನ ಮಂತ್ರಿಯಾಗಿ ವಿಶೇಷವಾಗಿ ಕಾಶ್ಮೀರಕ್ಕೆ ಉತ್ತಮ ಕೆಲಸಗಳನ್ನು ಅಮಾಡಿದ್ದಕ್ಕಾಗಿ ಅವರಿಗೆ (ದೇವೇಗೌಡ) ಧನ್ಯವಾದ ಹೇಳಲು ನಾನು ಇಲ್ಲಿಗೆ ಬಂದಿದ್ದೇನೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿರುವುದರಿಂದ ಈ ಸಭೆ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.