ವರುಣಾದಲ್ಲಿ ಕುಕ್ಕರ್ ವಿತರಣೆ: ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಎಚ್ ಡಿಕೆ ಆಗ್ರಹ

0
19

ಬೆಂಗಳೂರು, ಸೆ. 20 – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ  ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಸಿದ್ದರಾಮಯ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಮಾಜಿ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಳಿದ ಕ್ಷೇತ್ರಗಳ ಕಥೆ ಹಾಗಿರಲಿ, ಕರ್ನಾಟಕದ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿಯೇ ಜಾತಿ ಸಮಾವೇಶ ನಡೆಸಿ ಕುಕ್ಕರ್, ಇಸ್ತ್ರಿಪೆಟ್ಟಿಗೆಗಳ ಭರ್ಜರಿ ಸಮಾರಾಧನೆ ನಡೆದಿದೆ. ಸಮಾಜವಾದಿ ಮುಖ್ಯಮಂತ್ರಿ ಮಹೋದಯರ ಹಾದಿಯಲ್ಲೇ ನಡೆದಿರುವ ಇಡೀ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅದೇ ವಾಮಮಾರ್ಗದಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಶ್ರೀ ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ಕನ್ನಡಿಗರ ಪ್ರಜಾಸತ್ತೆಯ ಮಹಾದೇಗುಲ ವಿಧಾನಸೌಧದ ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಮನಗರ, ಮಾಗಡಿ ಸೇರಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್ ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಸ್ವಾತಂತ್ರ್ಯ ಭಾರತ ಕಂಡ, ಅದೂ ಅಮೃತಕಾಲದಲ್ಲಿ ನಡೆದಿರುವ ಅತಿದೊಡ್ಡ ಚುನಾವಣಾ ಅಕ್ರಮ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಹೆಗ್ಗಳಿಕೆಯ ಕಗ್ಗೊಲೆ ಎಂದು ಎಚ್ ಡಿಕೆ ಕಿಡಿ ಕಾರಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಈ ಚುನಾವಣಾ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಖಡಕ್ ತನಿಖೆ ನಡೆಸಿ, ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಲೇಬೇಕು. ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರ್ಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಈ ಅಕ್ರಮ ಸರ್ಕಾರ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಇಡೀ ಚುನಾವಣೆ ವ್ಯವಸ್ಥೆಯನ್ನೇ ನಾಶ ಮಾಡಲು ಸಂಚು ಹೂಡಿದೆ. ಕರ್ನಾಟಕ ಮಾದರಿ ಎನ್ನುವ ವಿನಾಶಕಾರಿ ಮಹಾಮಾರಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಹೊರಟಿದೆ. ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿ ಶೀಘ್ರವೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಷಡ್ಯಂತ್ರ, ಕುತಂತ್ರ, ಕುಯುಕ್ತಿಗಳನ್ನು ಪ್ರಯೋಗ ಮಾಡಲು ಹೊರಟಿದೆ. ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ವಿಷಪ್ರಾಶನ ಮಾಡುವ ಈ ದೇಶದ್ರೋಹಿ ಕೃತ್ಯವನ್ನು ಎಲ್ಲರೂ ತಡೆಯಲೇಬೇಕಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here